ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 116ನೇ ಜಯಂತಿ ಹಿನ್ನೆಲೆಯಲ್ಲಿ ಶನಿವಾರ ಒಂದು ದಿವ್ಯ ಸಂದರ್ಭಕ್ಕೆ ಸಾಕ್ಷಿಯಾಯಿತು.
ಹೌದು. ಶ್ರೀಗಳ 116ನೇ ಜಯಂತ್ಯೋತ್ಸವದ ಪ್ರಯುಕ್ತ 116 ಮಕ್ಕಳಿಗೆ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವ ಮೂಲಕ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಮತ್ತಷ್ಟು ಪ್ರಜ್ವಲಗೊಳಿಸುವ ಕಾರ್ಯ ನಡೆಯಿತು.
116 ಮಕ್ಕಳಿಗೆ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವ ಸಲುವಾಗಿ ಈಗಾಗಲೇ ಪೋಷಕರು ಮಕ್ಕಳ ಹೆಸರು ಹಾಗೂ ವಿವರ ನೋಂದಾಯಿಸಿದ್ದರು.
ಪ್ರಾತಃಕಾಲದಿಂದಲೇ ಬಿಲ್ವಾರ್ಚನೆ, ಪುಷ್ಪಾರ್ಚನೆ
ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಗೆ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರುಗಳು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಸಿದ್ಧಲಿಂಗ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕೆರಗೋಡಿ ರಂಗಾಪುರದ ಗುರುಪರದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ ನೆರವೇರಿಸಿದರು.
ಶ್ರೀಗಳ ಜಯಂತಿ ಪ್ರಯುಕ್ತ ಗದ್ದುಗೆ, ಮಠದ ಆವರಣವನ್ನು ವಿವಿಧ ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ರಾಜ್ಯದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಗದ್ದುಗೆಯ ದರ್ಶನ ಪಡೆದರು. ಇದೇ ವೇಳೆ ಮಠಕ್ಕೆ ಬರುವ ಭಕ್ತರಿಗಾಗಿ ಮಠದ ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.
ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಸೇರಿದಂತೆ ವಿವಿಧ ಮಠಾಧೀಶರು, ಗಣ್ಯರು ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.