ದೇಶದ ರಾಜಧಾನಿ ದೆಹಲಿಯ ಹಲವೆಡೆ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ನಗರದಾದ್ಯಂತ 100 ಕ್ಕೂ ಅಧಿಕ ಎಫ್‌ಐಆರ್ ದಾಖಲಿಸಿರುವ ದಿಲ್ಲಿ ಪೊಲೀಸರು ಆರು ಮಂದಿಯನ್ನು ಬಂಧಿಸಲಾಗಿದೆ.
ಆರೋಪಗಳ ಪ್ರಕಾರ, ದೆಹಲಿ ವಿವಿಧ ಭಾಗದಲ್ಲಿ “ಮೋದಿ ಹಠಾವೋ ದೇಶ್ ಬಚಾವೋ” ಎಂಬ ಬರೆಹದ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಪ್ರಿಂಟಿಂಗ್ ಪ್ರೆಸ್ ಆಕ್ಟ್ ಮತ್ತು ಆಸ್ತಿ ವಿರೂಪ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ನಗರದಾದ್ಯಂತ ಎಫ್‌ಐಆರ್ ದಾಖಲಿಸಲಾಗಿದೆ.
ದೆಹಲಿಯಾದ್ಯಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 100 ಕ್ಕೂ ಹೆಚ್ಚು ಎಫ್‌ಐಆರ್ ದಾಖಲಿಸಿದ್ದೇವೆ, ಈಗಾಗಲೇ ಆರು ಜನರನ್ನು ಬಂಧಿಸಲಾಗಿದೆ ಎಂದು ವಿಶೇಷ ಸಿಪಿ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ.
ಪೋಸ್ಟರ್‌ಗಳಲ್ಲಿ ಪ್ರಿಂಟಿಂಗ್ ಪ್ರೆಸ್ ಅಥವಾ ಪ್ರಕಟಿಸಿದವರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ ಪೋಸ್ಟರ್ ಅಂಟಿಸಿರುವುದರ ಹಿಂದೆ ಯಾರಿದ್ದಾರೆ ಎನ್ನುವುದು ಇದುವರೆಗೂ ಸ್ಪಷ್ಟವಾಗಿಲ್ಲ, ಆರು ಮಂದಿಯ ಬಂಧನ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಎಎಪಿಯ ಕಛೇರಿಯೊಂದರ ಸಮೀಪದಿಂದ ಈ ಆರು ಮಂದಿಯನ್ನು ಬಂಧಿಸಲಾಗಿದ್ದು, ಪೋಸ್ಟರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.