ಅಪರಾಧ ಮುಕ್ತ ರಾಜಕಾರಣದ ಭಾಗವಾಗಿ ಅತ್ಯಾಚಾರ, ಕೊಲೆ, ಅಪಹರಣ, ಸುಲಿಗೆ, ಲಂಚ, ಹಣ ಅಕ್ರಮ ವರ್ಗಾವಣೆ, ಆದಾಯ ಮೀರಿದ ಆಸ್ತಿ ಗಳಿಕೆ ಇತ್ಯಾದಿ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಿರುವ ವ್ಯಕ್ತಿಗೆ ಚುನಾವಣೆಗೆ ಸ್ಪರ್ಧಿಸುವುದರಿಂದ ನಿಷೇಧ ಹೇರಬೇಕು ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು.
ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, ರಾಜಕೀಯವನ್ನು ಪರಿಣಾಮಕಾರಿಯಾಗಿ ಅಪರಾಧ ಮುಕ್ತ ಮಾಡಲು ಯಾವುದೇ ಕ್ರಮ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗದ ವ್ಯಾಪ್ತಿಯಿಂದ ಹೊರಗಿರುವ ಶಾಸಕಾಂಗ ತಿದ್ದುಪಡಿಗಳ ಅಗತ್ಯವಿರುತ್ತದೆ ಎಂದು ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ಹೇಳಿದೆ.
‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸುವ ಕಾರ್ಯವು ನಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ’ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಈ ನಿಟ್ಟಿನಲ್ಲಿ ಆಯೋಗವು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೆಲ ಶಿಫಾರಸುಗಳನ್ನೂ ಮಾಡಿದೆ. ಆದರೆ, ಇದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಾಯ್ದೆಗೆ ತಿದ್ದುಪಡಿ ಅಗತ್ಯ‘ ಎಂದು ಚುನಾವಣಾ ಆಯೋಗವು ಹೇಳಿದೆ.
ವಕೀಲ ಅಶ್ವಿನ್ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠವು ವಿಚಾರಣೆ ನಡೆಸಿತು.