ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ವರಿಷ್ಠರ ಅನುಮತಿಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಗೆ ದೌಡಾಯಿಸಲಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಇದುವರೆಗೂ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಪ್ರಕಟಿಸಿದ್ದು, ಬಿಜೆಪಿ ಇದುವರೆಗೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.
ಪ್ರತಿ ಕ್ಷೇತ್ರದಲ್ಲೂ ಕಾರ್ಯಕರ್ತರ, ಸ್ಥಳೀಯ ಮುಖಂಡರ ಸಲಹೆ ಪಡೆದು ಮೂವರು ಸಂಭಾವ್ಯ ಅಭ್ಯರ್ಥಿಗಳನ್ನು ಸೂಚಿಸುವಂತೆ ಬಿಜೆಪಿ ಹೈಕಮ್ಯಾಂಡ್ ಆದೇಶಿಸಿತ್ತು. ಈ ಪಟ್ಟಿಯೊಂದಿಗೆ ಸಮೀಕ್ಷಾ ವರದಿ ಮತ್ತು ಬ್ಯಾಲೆಟ್ ವೋಟ್ ಅಭಿಪ್ರಾಯ ಆಧರಿಸಿ ಬಿಜೆಪಿ ವರಿಷ್ಠರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ ದೆಹಲಿಗೆ ತೆರಳಲಿರುವ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ವಾಪಸಾಗುತ್ತಿದ್ದಂತೆಯೇ ಬಿಜೆಪಿ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ.