ಬೀದರಿನ ಮೈಲೂರು ರಿಂಗ್ ರೋಡ್ ನಲ್ಲಿ ಹಲವು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನಕ್ಕೆ ತೆರಳಿದಾಗ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ್ದು, ರಕ್ಷಣಾತ್ಮಕವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ತಮಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ ಈ ಹಲ್ಲೆ ಯತ್ನ ನಡೆದಿದೆ ಎಂದು ವರದಿಯಾಗಿದೆ.
ಇಬ್ಬರು ದರೋಡೆಕೋರರು ಪೊಲೀಸರ ಮೇಲೇ ಹಲ್ಲೆ ಮಾಡಲು ಬಂದಾಗ ಬೀದರ್ ರೂರಲ್ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ದಾರೆ. ಬಳಿಕ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದರು. ಆದರೆ ಇನ್ನೊಬ್ಬ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಪಿಎಸ್‌ಐ ನಾಗೇಂದ್ರ ಮತ್ತು ಇತರೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.