ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯು ಮೈಸೂರು ರಸ್ತೆಯ ಬ್ಯಾಟರಾಯನ ಪುರದಲ್ಲಿರುವ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿದೆ.
ಕಳೆದ ವರ್ಷ ದೇವಸ್ಥಾನದ ಹುಂಡಿ ಎಣಿಕೆಯ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು ಹಣ ಎಗರಿಸಿದ್ದರು. ಈ ಘಟನೆಯ ದೃಶ್ಯ ದೇಗುಲದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಕೂಡ ಹರಿದಾಡಿದ್ದು, ಭಾರೀ ಆಕ್ರೋಶ ಕೇಳಿಬಂದಿತ್ತು. ಬಳಿಕ ಈ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ಇದೀಗ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ ಎಂದಿದೆ.
ಸರ್ಕಾರದ ಆದೇಶದಲ್ಲೇನಿದೆ?: ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತಿ ರೀತಿಯಲ್ಲಿ ನಿರ್ವಹಿಸುತ್ತಿರುವುದು ಮತ್ತು ಹಣ ದುರುಪಯೋಗಪಡಿಸಿಕೊಂಡಿರುವುದು, ಟಸ್ಟ್ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 ರ ಕಲಂ ಸೆಕ್ಷನ್ 42 ಮತ್ತು 43 ರ ಅನ್ವಯ ಘೋಷಿತ ಸಂಸ್ಥೆ” ಎಂದು ಘೋಷಿಸಿ ಆದೇಶ ಹೊರಡಿಸಲಾಗಿದೆ.
ವರದಿಯಲ್ಲಿ ಏನಿದೆ..?: ವಿಚಾರಣಾ ವರದಿಯಲ್ಲಿ, ಗಾಳಿ ಆಂಜನೇಯಸ್ವಾಮಿ ದೇಗುಲಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದೆ. ಆದರೂ, ಟ್ರಸ್ಟ್ನ ಪದಾಧಿಕಾರಿ ಹೊಂದಾಣಿಕೆ ಇಲ್ಲದೇ ಇರುವುದು ಹಾಗೂ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದ್ದು, ಪ್ರತಿ ವರ್ಷ ಉಳಿತಾಯವಿಲ್ಲದೇ ವೆಚ್ಚ ಮಾಡಲಾಗುತ್ತಿದೆ. ಇದರಿಂದ ದೇವಸ್ಥಾನದ ಹಣವು ದುರುಪಯೋಗವಾಗುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಅಲ್ಲದೆ ಆದಾಯ ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆಗಳನ್ನು ಇಡದೆ ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ನೋಟೀಸ್ ನೀಡಿದ ನಂತರ ದಾಖಲೆಗಳನ್ನು ಸೃಷ್ಟಿಸಿರುವುದು ಕಂಡು ಬಂದಿದೆ.
ದೇವಾಲಯದ ಸಿಬ್ಬಂದಿ ಹುಂಡಿ ಹಣ ಕದ್ದಿರುವ ಬಗ್ಗೆ ಇಂಟರ್‌ನೆಟ್‌ನಲ್ಲಿ ಹರದಾಡಿದ ವಿಡಿಯೋ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕ ಹಾಗೂ ಭಕ್ತಾದಿಗಳ ಹಿತದೃಷ್ಟಿಯಿಂದ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯುವುದು ಸೂಕ್ತವಾಗಿರುತ್ತದೆ ಎಂದು ಮುಜರಾಯಿ ಇಲಾಖೆ ವರದಿ ಸಲ್ಲಿಸಿದೆ.