ಗಾಂಧೀನಗರ: ದೇಶದ ಭದ್ರತೆಗೆ ದೊಡ್ಡ ಮಟ್ಟದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಗುಜರಾತ್ (Gujarat ) ಭಯೋತ್ಪಾದನಾ ನಿಗ್ರಹ ದಳ (ATS), ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JeM) ಉಗ್ರ (Terrorist ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಎಂಟು ಜನರನ್ನು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಗುಜರಾತ್‌ನ ಬನಸ್ಕಾಂತ, ಪಠಾಣ್, ನವಸಾರಿ ಹಾಗೂ ಮಧ್ಯಪ್ರದೇಶದ ದೇವಾಸ್ ಸೇರಿದಂತೆ ಹಲವು ಆಯಕಟ್ಟಿನ ಪ್ರದೇಶಗಳಲ್ಲಿ ಈ ಸಂಘಟಿತ ದಾಳಿ ನಡೆದಿದೆ. ಬಂಧಿತರು ಗುಜರಾತ್‌ನ ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯ ಹಾಗೂ ದಾಳಿಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಉಗ್ರರಿಗೆ ಆಶ್ರಯ ಮತ್ತು ಸಾಗಣೆ ವ್ಯವಸ್ಥೆ ಕಲ್ಪಿಸುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಪಿಗಳು ಪಠಾಣ್ ಹಾಗೂ ನವಸಾರಿಯ ಪ್ರಮುಖ ಮದರಸಾಗಳನ್ನು ತಮ್ಮ ಕಾರ್ಯಾಚರಣೆಯ ಕೇಂದ್ರಗಳನ್ನಾಗಿ ಬಳಸಿಕೊಳ್ಳುತ್ತಿದ್ದರು. ಇಲ್ಲಿ ಯುವ ಜನರನ್ನು ತಪ್ಪು ದಾರಿಗೆ ಎಳೆದು, ಮೂಲಭೂತವಾದಿಗಳಾಗಿ ಪರಿವರ್ತಿಸಲು ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡಲು ಈ ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಭದ್ರತಾ ಸಂಸ್ಥೆಗಳು ತಿಳಿಸಿವೆ.
ಸದ್ಯ ಬಂಧಿತರೆಲ್ಲರನ್ನೂ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ ಭಯೋತ್ಪಾದನೆಗೆ ಹಣಕಾಸು ಒದಗಿಸುವಿಕೆ ಹಾಗೂ ದೇಶದ್ರೋಹದ ಪಿತೂರಿಯ ಗಂಭೀರ ಪ್ರಕರಣಗಳನ್ನು ದಾಖಲಿಸಿ ಎಟಿಎಸ್ ಪೊಲೀಸರು ಮುಂದಿನ ವಿಚಾರಣೆ ಕೈಗೊಂಡಿದ್ದಾರೆ.