ಬಳ್ಳಾರಿ: ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣೆ ನಡೆಯುತ್ತಿದ್ದು ಇನ್ನೊಂದು ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ದವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನುಡಿದಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕಾಗಿ ತಂಡಗಳನ್ನು ಕಳುಹಿಸಲಾಗಿದೆ ಎಂದರು.
ಇದೇ ವೇಳೆ ಕೂಡ್ಲಿಗೆ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿಗೆ ರಾಜೀನಾಮೆ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳ ಮುಖಾಂತರ ನನಗೂ ಸುದ್ದಿ ತಿಳಿಯಿತು. ರಾಜೀನಾಮೆಗೆ ನಿಖರ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ. ಚುನಾವಣೆ ಸಮಯದಲ್ಲಿ ಪಕ್ಷಾಂತರ ಸಹಜ. ನಮ್ಮ ಪಕ್ಷಕ್ಕೆ ಬೇರೆ ಪಕ್ಷಗಳಿಂದ ಹಲವು ಶಾಸಕರು ಬರಲಿದ್ದಾರೆ ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು.
ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವ ಸಿದ್ದರಾಮಯ್ಯನವರಿಗೇ ಕಾಂಗ್ರೆಸ್‍ನಲ್ಲಿ ಕ್ಷೇತ್ರಕ್ಕೆ ಪರದಾಡುವ ಪರಿಸ್ಥಿತಿ ಇದೆ. ಮತದಾರರ ಒಲವು ಬಿಜೆಪಿ ಕಡೆಗಿರುವುದು ಖಚಿತವಾಗಿದ್ದು, ಕಾಂಗ್ರೆಸ್ ಹೀನಾಯ ಸೋಲು ಕಾಣಲಿದೆ ಎಂದು ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.