ಬೆಂಗಳೂರು: ಏಪ್ರಿಲ್ 8 ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಂದೇ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದಲ್ಲದೇ ಈ ಬಾರಿ ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತೆ ಎಂದಿದ್ದಾರೆ
ಚುನಾವಣೆಗೆ ಕರುನಾಡು ತಯಾರಾಗುತ್ತಿದ್ದು, ಈಗಾಗಲೇ ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಾರ್ಟಿ ಸೇರಿದಂತೆ ಹಲವು ಪಕ್ಷಗಳು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿವೆ. ಅದರೆ, ಆಡಳಿರೂಢ ಬಿಜೆಪಿ ಮಾತ್ರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಏಪ್ರಿಲ್ 8 ರಂದು ಅಂತಿಮಗೊಳಿಸಲಿದೆ. ಈ ಬಗ್ಗೆ ಎಲ್ಲ ಮುಖಂಡರ ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗಿದೆ. ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆಯಲ್ಲಿ ಎಲ್ಲಾ ಮುಖಂಡರ ಅಭಿಪ್ರಾಯಗಳನ್ನು ಚರ್ಚಿಸಲಾಗುವುದು. ನಂತರ ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.