Sunday, July 7, 2024
Homeಟಾಪ್ ನ್ಯೂಸ್CM Siddaramaiah: ಬಡವರಿಗೆ ಸೂರು : ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್

CM Siddaramaiah: ಬಡವರಿಗೆ ಸೂರು : ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಸರ್ವರಿಗೂ ಸೂರು ಯೋಜನೆಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ನಿರ್ಮಾಣದ ವಿವಿಧ ಹಂತದಲ್ಲಿ ಇರುವ 1,29,457 ಮನೆಗಳಿಗೆ ಎಷ್ಟು ಹಣಕಾಸು ಬೇಕಾಗುತ್ತದೆ, ಈ ವರ್ಷ ಗರಿಷ್ಠ ಎಷ್ಟು ಕೊಡಬಹುದು, ಮುಂದಿನ ವರ್ಷ ಎಷ್ಟು ಕೊಡಬಹುದು ಎಂದು ಪರಿಶೀಲನೆ ಮಾಡುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದರು. ಆದರೆ, ಫಲಾನುಭವಿಗಳಿಂದ ಒಂದು ಲಕ್ಷ ರೂ. ಕಡ್ಡಾಯವಾಗಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಎರಡನೇ ಹಂತದಲ್ಲಿ 39, 966 ಮನೆ ಹಂಚಿಕೆಗೆ ಸಿದ್ಧವಿದ್ದು 862 ಕೋಟಿ ರೂ. ಅಗತ್ಯವಿದೆ. ಅದೇ ರೀತಿ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಮೊದಲ ಹಂತದಲ್ಲಿ ಹಂಚಿಕೆಗೆ 11,406 ಮನೆ ಸಿದ್ದವಿದ್ದು 1,879 ಕೋಟಿ ರೂ. ಅಗತ್ಯವಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಸಭೆಯಲ್ಲಿ ವಿವರಿಸಿದರು.

ಏನಿದು ಯೋಜನೆ?
ಸರ್ವರಿಗೂ ಸೂರು ಯೋಜನೆಯಡಿಯಲ್ಲಿ 2013 ರಿಂದ 2023 ರವರೆಗೆ ಮಂಜೂರು ಮಾಡಿದ್ದ ವಸತಿ ಯೋಜನೆಯಡಿ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯವಾಗದೆ 2.32 ಲಕ್ಷ ಮನೆಗಳ ನಿರ್ಮಾಣ ನೆನೆಗುದಿಗೆ ಬಿದ್ದಿತು. ಬಡ ಕುಟುಂಬಗಳ ಸಮಸ್ಯೆಯನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿ ಕುಟುಂಬದ ಫಲಾನುಭವಿ ವಂತಿಗೆ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಮೊದಲು ಕೊಳಗೇರಿ ಅಭಿವೃದ್ಧಿ ಮಂಡಳಿ ಯೋಜನೆಗೆ ಅನುಮತಿ ದೊರೆತಿತ್ತು. ಬುಧವಾರದ ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೂ ಅನ್ವಯ ಮಾಡಲು ತಾತ್ವಿಕ ಒಪ್ಪಿಗೆ ದೊರೆಯಿತು.

ಹೆಚ್ಚಿನ ಸುದ್ದಿ