ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ, ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುಮತಿ ದೊರೆತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯರ ನೇಮಕಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದು, ಇದರ ಜೊತೆಗೆ ಪ್ರಸೂತಿ ಮತ್ತು ತಜ್ಞ ವೈದ್ಯರ ವೇತನ ಹೆಚ್ಚಳಕ್ಕೂ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಹೀಗಾಗಿ ಸದ್ಯದಲ್ಲೇ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಕೊರತೆ ನೀಗುವ ಭರವಸೆಯನ್ನು ಆರೋಗ್ಯ ಸಚಿವರು ವ್ಯಕ್ತಪಡಿಸಿದ್ದು, ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳ ಅವ್ಯವಸ್ಥೆಗಳ ಬಗ್ಗೆಯೂ ಆದಷ್ಟು ಬೇಗ ಗಮನ ಹರಿಸಲಿ ಎಂಬುದು ಜನರ ನಿರೀಕ್ಷೆ.