ಭಾರತಾದ್ಯಂತ ಒಂದು ತಿಂಗಳ ಕಾಲ ಗಾಂಧೀಜಿ ಮತ್ತು ಅಂಬೇಡ್ಕರ್ ಪ್ರತಿಮೆಗಳ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಅದಾನಿ ಸಮೂಹದ ಪ್ರಕರಣ ಮತ್ತು ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆಯನ್ನು ಮುಂದಿಟ್ಟುಕೊಂಡು ದೇಶಾದ್ಯಂತ ಜೈ ಭಾರತ್ ಸತ್ಯಾಗ್ರಹ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನೀಲನಕ್ಷೆ ರೂಪಿಸಿದೆ.
ಪ್ರಜಾಪ್ರಭುತ್ವವು ಅಪಾಯದಲ್ಲಿರುವಾಗ ಕಾಂಗ್ರೆಸ್ ತನ್ನ ಕರ್ತವ್ಯದಿಂದ ಹಿಂದೆ ಸರಿಯುವುದು ಸಾಧ್ಯವಿಲ್ಲ ಎಂದು ಗುಡುಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಪ್ರತಿಭಟನೆಯ ಬಗ್ಗೆ ವಿವರಣೆ ನೀಡಿದ್ದಾರೆ. ಸಂಸತ್ ಭವನದ ಒಳಗೆ ಮತ್ತು ಹೊರಗೆ ಕಾಂಗ್ರೆಸ್ ನಾಯಕರು ಹೋರಾಟಕ್ಕೆ ಸಜ್ಜಾಗಿದ್ದು, ದೇಶದ ವಿವಿಧ ಭಾಗಗಳಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಪ್ರತಿಯೊಬ್ಬರಿಗೂ ಮಾಹಿತಿ ತಲುಪಿಸಿ ಎಂದು ಸೂಚಿಸಿರುವ ಕಾಂಗ್ರೆಸ್ ಹೈಕಮ್ಯಾಂಡ್, ಸಾಮಾಜಿಕ ಜಾಲತಾಣಗಳಲ್ಲೂ ಸಹ ಅಭಿಯಾನಗಳನ್ನು ಪ್ರಾರಂಭಿಸಲು ಮುಂದಾಗಿದೆ.
ಏಪ್ರಿಲ್ ಎರಡನೇ ವಾರದಿಂದ ದೆಹಲಿಯಲ್ಲಿ ರಾಷ್ಟ್ರಮಟ್ಟದ ರ್ಯಾಲಿಯೊಂದಕ್ಕೆ ಚಾಲನೆ ನೀಡಲು ಚಿಂತನೆ ನಡೆದಿದೆ. ಜೊತೆಗೆ ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು, ಬ್ಲಾಕ್ ಮತ್ತು ಬೂತ್ ಮಟ್ಟದಲ್ಲೂ ಸಹ ಪ್ರತಿಭಟನೆ ನಡೆಸುವಂತೆ ಯೋಜನೆ ಸಿದ್ದಪಡಿಸಲಾಗಿದೆ. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಪ್ರಕೋಷ್ಠಗಳಿಂದಲೂ ಸಹ ಪ್ರತ್ಯೇಕವಾಗಿ ಪ್ರತಿಭಟನಾ ಧರಣಿಗಳನ್ನು ಏ. 1 ರಂದು ಹಮ್ಮಿಕೊಳ್ಳಲಾಗಿದ್ದು, ಮಾ. 29 ಬುಧವಾರ ಕೇಂದ್ರದಲ್ಲಿ ಇದೇ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಏ 15-20 ರವರೆಗೆ ನಡೆಯಲಿರುವ ಸತ್ಯಾಗ್ರಹದಲ್ಲಿ ಜಿಲ್ಲಾಡಳಿತ ಕೇಂದ್ರಗಳಿಗೆ ರಾಜ್ಯ ಮಟ್ಟದ ನಾಯಕರ ಸಾರಥ್ಯದಲ್ಲಿ ಮುತ್ತಿಗೆ ಹಾಕುವ ಮೂಲಕ ಕಾಂಗ್ರೆಸ್ ಪ್ರತಿಭಟಿಸಲಿದೆ.