ಬೆಂಗಳೂರು: ಬೆಂಗಳೂರಿನ (Bengaluru) ವಸತಿ ಶಾಲೆಯೊಂದರಲ್ಲಿ (Residential School) ಆರನೇ ತರಗತಿ ವಿದ್ಯಾರ್ಥಿಯೊಬ್ಬ (Student) ನಿಗೂಢವಾಗಿ ಮೃತಪಟ್ಟಿರುವ ಘಟನೆ (Crime) ನಡೆದಿದ್ದು, ಶಾಲೆಯ ಆವರಣದಲ್ಲಿ ಪೋಷಕರು ಹಾಗೂ ಸಂಬಂಧಿಕರ ಆಕ್ರೋಶದ ಪ್ರತಿಭಟನೆಯಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಮೃತ ಬಾಲಕನನ್ನು 12 ವರ್ಷದ ಗುರುಕಿರಣ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಸ್ಟ್ರಲಿಂಗ್ ವಸತಿ ಶಾಲೆಯಲ್ಲಿ ಓದುತ್ತಿದ್ದನು. ಎಂದಿನಂತೆ ಮುಂಜಾನೆ ಜಾಗಿಂಗ್ ಮಾಡುತ್ತಿದ್ದ ಸಮಯದಲ್ಲಿ ಗುರುಕಿರಣ್ ಹಠಾತ್ತನೆ ಕುಸಿದು ಬಿದ್ದಿದ್ದಾನೆ ಎಂದು ಶಾಲೆಯ ಆಡಳಿತ ಮಂಡಳಿಯವರು ಪೋಷಕರಿಗೆ ಕರೆ ಮಾಡಿ ತಿಳಿಸಿದ್ದರು. ಅಲ್ಲದೆ, ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದೂ ಹೇಳಿ, ಪೋಷಕರನ್ನು ಆಸ್ಪತ್ರೆಗೆ ಬರುವಂತೆ ಸೂಚಿಸಿದ್ದರು.
ಆದರೆ, ಆತಂಕದಿಂದ ಪೋಷಕರು ಆಸ್ಪತ್ರೆಗೆ ತಲುಪುವಷ್ಟರಲ್ಲೇ ಬಾಲಕ ಗುರುಕಿರಣ್ ಮೃತಪಟ್ಟಿದ್ದನು. ಇದು ಕೇವಲ ಆಕಸ್ಮಿಕ ಸಾವಲ್ಲ ಎಂದು ಗಂಭೀರವಾಗಿ ಆರೋಪಿಸಿರುವ ಪೋಷಕರು, ಶಾಲೆಯ ಶಿಕ್ಷಕರು ಮಗನಿಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ದೂರಿದ್ದಾರೆ. ಶಿಕ್ಷಕರ ಕಿರುಕುಳ ಮತ್ತು ಒತ್ತಡದಿಂದಲೇ ತಮ್ಮ ಮಗ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಅವರು ಕಣ್ಣೀರು ಹಾಕಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ಪೋಷಕರು ಮತ್ತು ಸಂಬಂಧಿಕರು ಶಾಲೆಯ ಬಳಿ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದು, ತಮ್ಮ ಮಗನ ಸಾವಿಗೆ ಸೂಕ್ತ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯವಾಗಿ ಶಾಲೆಯ ಪಿಟಿ ಶಿಕ್ಷಕನ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಿರುವ ಅವರು, ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ.