ಚಿತ್ರದುರ್ಗ: ರಾಜ್ಯಾದ್ಯಂತ ಬಿಸಿಲಿನ ತಾಪ ಏರುತ್ತಿರುವ ಬೆನ್ನಲ್ಲೇ ಬೆಂಕಿ ಅವಘಡಗಳ (Fire Accident) ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Blast) ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗ್ರಾಮದ ನಿವಾಸಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆಯಲ್ಲಿ ಅನಿಲ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆಗೆ ಬೆಂಕಿ ವ್ಯಾಪಿಸಿದ್ದು, ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಬೆಲೆಬಾಳುವ ಚಿನ್ನಾಭರಣ ಹಾಗೂ ಸಂಗ್ರಹಿಸಿಡಲಾಗಿದ್ದ ದವಸ ಧಾನ್ಯಗಳು ಬೆಂಕಿಗಾಹುತಿಯಾಗಿವೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೇಹಾನ್ ಪಾಷಾ, ಹಾನಿಯ ಕುರಿತು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮೃತ ವ್ಯಕ್ತಿಯೊಂದಿಗೆ ಐಷಾರಾಮಿ ಕಾರು ಹೂತಾಕಿ ಅಂತ್ಯಸಂಸ್ಕಾರ – ನೆಟ್ಟಿಗರಿಂದ ವ್ಯಾಪಕ ಟೀಕೆ : VIDEO