ಬೆಂಗಳೂರು: ಡಿ.ಕೆ. ಶಿವಕುಮಾರ್ (DK Shivakumar) ಅವರು ಕರ್ನಾಟಕದ (Karnataka) 25ನೇ ಮುಖ್ಯಮಂತ್ರಿಯಾಗಿ (Chief Minister) ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಡಿಕೆಶಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯ ರಂಗ ಪ್ರವೇಶಿಸಿ, ಸಂಘಟನಾ ಚಾತುರ್ಯ ಹಾಗೂ ಕಠಿಣ ಪರಿಶ್ರಮದ ಮೂಲಕ ಹಂತ ಹಂತವಾಗಿ ಬೆಳೆದ ಡಿಕೆಶಿ, ಇದೀಗ ರಾಜ್ಯದ ಅತ್ಯುನ್ನತ ರಾಜಕೀಯ ಸಿಂಹಾಸನವನ್ನು ಅಲಂಕರಿಸುತ್ತಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೂ ಕೆಲವೇ ನಿಮಿಷಗಳ ಮುನ್ನ ಡಿಕೆಶಿ ಅವರು ಅಜ್ಜಯ್ಯನವರ ಭಾವಚಿತ್ರಕ್ಕೆ ನಮಿಸಿದರು.
ಡಿಕೆಶಿ ಪದಗ್ರಹಣ ಕಾರ್ಯಕ್ರಮದಲ್ಲಿ ಗಣ್ಯರ ದಂಡು
ಈ ಐತಿಹಾಸಿಕ ಕ್ಷಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಾಕ್ಷಿ ಆಗಿದ್ದರು. ಇವರೊಂದಿಗೆ ದೇಶದ ವಿವಿಧ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಹಲವು ಸಂಸದರು ಮತ್ತು ಗಣ್ಯಾತಿಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪಕ್ಷದ ಸಾರಥ್ಯದಿಂದ ಮುಖ್ಯಮಂತ್ರಿ ಗದ್ದುಗೆಗೆ
ಕಳೆದ 2020ರಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಜವಾಬ್ದಾರಿ ಹೊತ್ತ ಡಿ.ಕೆ. ಶಿವಕುಮಾರ್ ಅವರು, ತಳಮಟ್ಟದಿಂದ ಪಕ್ಷವನ್ನು ಕಟ್ಟಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಹೈಕಮಾಂಡ್‌ನ ಅಧಿಕಾರ ಹಂಚಿಕೆ ಸೂತ್ರದ ಯಶಸ್ವಿ ಅನುಷ್ಠಾನದ ಅಡಿಯಲ್ಲಿ, ಅಪ್ಪಟ ಮೂಲ ಕಾಂಗ್ರೆಸ್ಸಿಗನಾಗಿ ಇವತ್ತು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ, ಹಿರಿಯ ನಾಯಕ ಮತ್ತು ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಪದಗ್ರಹಣ ಮಾಡಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಂಪುಟದ ಮೊದಲ ಪಟ್ಟಿಯಲ್ಲಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಪಟ್ಟ ಒಲಿದಿದೆ. ದೃಢ ಸಿದ್ಧಾಂತದ ನಾಯಕರಾಗಿರುವ ಇವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಶಾಸಕರಾಗಿ ಸುದೀರ್ಘ ಪಯಣ
ಡಾ. ಜಿ. ಪರಮೇಶ್ವರ್ ಅವರು ರಾಜ್ಯ ರಾಜಕಾರಣದಲ್ಲಿ ಒಟ್ಟು 5 ಬಾರಿ ಶಾಸಕರಾಗಿ ಆಯ್ಕೆಯಾದ ಸುದೀರ್ಘ ಅನುಭವ ಹೊಂದಿದ್ದಾರೆ. ಆರಂಭದಲ್ಲಿ ಇವರು 1989, 1999 ಮತ್ತು 2004ರ ವಿಧಾನಸಭಾ ಚುನಾವಣೆಗಳಲ್ಲಿ ಮಧುಗಿರಿ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಕ್ಷೇತ್ರ ಮರುವಿಂಗಡಣೆಯಾದ ಬಳಿಕ ಇವರು ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರಗೊಂಡು, ಅಲ್ಲಿಂದ ಸ್ಪರ್ಧಿಸಿ ಪ್ರಸ್ತುತ ಕಾಂಗ್ರೆಸ್ ಶಾಸಕರಾಗಿದ್ದಾರೆ.
ಸಂಪುಟಗಳಲ್ಲಿ ನಿಭಾಯಿಸಿದ ಪ್ರಮುಖ ಜವಾಬ್ದಾರಿಗಳು
ಕಳೆದ ಮೂರು ದಶಕಗಳಲ್ಲಿ ಕಾಂಗ್ರೆಸ್ ನೇತೃತ್ವದ ವಿವಿಧ ಸರ್ಕಾರಗಳಲ್ಲಿ ಡಾ. ಜಿ. ಪರಮೇಶ್ವರ್ ಅವರು ಅತ್ಯಂತ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದಾರೆ. 1993ರಲ್ಲಿ ಎಂ. ವೀರಪ್ಪ ಮೊಯ್ಲಿ ಅವರ ನೇತೃತ್ವದ ಸರ್ಕಾರದಲ್ಲಿ ರೇಷ್ಮೆ ಸಚಿವರಾಗಿ ಮೊದಲ ಬಾರಿಗೆ ಸಚಿವ ಸಂಪುಟ ಸೇರಿದ್ದರು. 1999ರಲ್ಲಿ ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಪ್ರಮುಖ ಸುಧಾರಣೆಗಳನ್ನು ತಂದಿದ್ದರು. 2015 ರಲ್ಲಿ ಸಿದ್ದರಾಮಯ್ಯ ಅವರ ಮೊದಲ ಅವಧಿಯ ಸರ್ಕಾರದಲ್ಲಿ ಅತ್ಯಂತ ಜವಾಬ್ದಾರಿಯುತವಾದ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. (ಇದಕ್ಕೂ ಮುನ್ನ 2014ರಲ್ಲಿ ಇವರು ವಿಧಾನಪರಿಷತ್ ಸದಸ್ಯರಾಗಿದ್ದರು).
ಇದನ್ನೂ ಓದಿ: ಡಿಕೆಶಿ ಮಹಾ ಪಟ್ಟಾಭಿಷೇಕ: ರೇಷ್ಮೆ ಉಡುಗೆಯಲ್ಲಿ ಮಿಂಚಿದ ‘ಕನಕಪುರ ಬಂಡೆ’!