ಮೈಸೂರು: ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಆರಂಭವಾದ ಜೆಡಿಎಸ್‌ನ ಮಹತ್ವಾಕಾಂಕ್ಷಿ ಪಂಚರತ್ನ ರಥಯಾತ್ರೆ ನಾಳೆ ಸಮಾರೋಪಗೊಳ್ಳಲಿದೆ. ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಸಮಾರೋಪ ಸಮಾವೇಶ ನಡೆಯಲಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.
ಮೈಸೂರಿನ ಉತ್ತನಹಳ್ಳಿ ರಿಂಗ್ ರಸ್ತೆಯ ನೂರು ಎಕರೆ ಪ್ರದೇಶದ ವಿಶಾಲ ಮೈದಾನದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಮಾರಂಭಕ್ಕೂ ಮೊದಲು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿಯ ರಿಂಗ್ ರಸ್ತೆಯಿಂದ ಬೃಹತ್ ರೋಡ್ ಶೋ ನಡೆಯಲಿದೆ. ಈ ರೋಡ್ ಶೋ ನಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಅವರು ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಎಲ್ಲ ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ
100×50 ಅಡಿಯ ವಿಶಾಲ ವೇದಿಕೆ, ಮೈದಾನದ ಯಾವುದೇ ಭಾಗದಿಂದಲೂ ವೇದಿಕೆ ಕಾರ್ಯಕ್ರಮ ನೋಡಲು ಸಾಧ್ಯ ಆಗುವಂತೆ ಬೃಹತ್ ಎಲ್ ಇ ಡಿ ಪರದೆಗಳನ್ನು ಅಳವಡಿಸಲಾಗಿದೆ.
ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದು, ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಜೆಡಿಎಸ್ ಶಕ್ತಿ, ಸಾಮರ್ಥ್ಯದ ಅನಾವರಣವಾಗಲಿದೆ. ರಾಜ್ಯದ ಉದ್ದಗಲಕ್ಕೂ ಕಳೆದ ವರ್ಷದ ನವೆಂಬರ್ 18ರಿಂದ ಮಾರ್ಚ್ 24ರವರೆಗೆ ಪಂಚರತ್ನ ರಥಯಾತ್ರೆ ನಡೆಸಿದ್ದೇನೆ. ಎಲ್ಲೆಡೆ ರಥಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಈ ಸಮಾರೋಪ ಸಮಾವೇಶ ಅಷ್ಟೇ ಯಶಸ್ಸು ಕಾಣುತ್ತದೆ ಎಂಬ ವಿಶ್ವಾಸ ನನ್ನದು ಎಂದು ಸಮಾರೋಪ ಸ್ಥಳ ಪರಿಶೀಲನೆ ವೇಳೆ ಕುಮಾರಸ್ವಾಮಿ ಹೇಳಿದ್ರು.