ಬೆಂಗಳೂರು: ರಾಜಧಾನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್ ಟ್ಯಾಕ್ಸಿ (rapido bike taxi) ವಿರುದ್ಧ ಆಟೋಚಾಲಕರು ಸಿಡಿದೆದ್ದಿದ್ದಾರೆ. ಬೈಕ್ ಟ್ಯಾಕ್ಸಿ ನಿಷೇಧಿಸಿ ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಾ ಬಂದಿರುವ ನಗರದ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಬೇಡಿಕೆ ಈಡೇರಿಕೆಗೆ 3 ದಿನಗಳ ಗಡುವು ನೀಡಿದ್ದವು. ಈ ಗಡುವು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ.
ಒಟ್ಟು 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ನಾಳೆ ಬಂದ್ ಆಗುತ್ತೆ ಎಂದು ಸಂಘ ತಿಳಿಸಿದ್ದು, ಪ್ರತಿಭಟನೆಯ ಭಾಗವಾಗಿ ನಾಳೆ ಬೆಳಗ್ಗೆ 11 ಗಂಟೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ಪ್ಲಾನ್ ಮಾಡಿದ್ದಾರೆ. ಮೂರು ದಿನಗಳ ಕಾಲ ಆಟೋ ಚಾಲಕರು ಕಪ್ಪು ಪಟ್ಟಿ ಕಟ್ಟಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೂ ಸರ್ಕಾರ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದೆ.