ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಿಂದಾಗಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರಗಳನ್ನೂ ಸಹ ಪೊಲೀಸರ ಸುಪರ್ದಿಗೆ ಒಪ್ಪಿಸಲು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ನ್ಯಾಯೋಚಿತವಾಗಿ ಚುನಾವಣೆ ನಡೆಸುವ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರುವುದಾಗಿ ಪ್ರತಾಪ್ ರೆಡ್ಡಿ ಹೇಳಿದ್ದಾರೆ.
ಮಾ 29 ರಂದು ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದು, ಎಲ್ಲಾ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳ ಮಾಲಿಕರು, ಮೇ.10 ರವರೆಗೆ ತಮ್ಮ ಆಯುಧಗಳನ್ನು ತಮ್ಮ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗೆ ಒಪ್ಪಿಸಲು ಸೂಚಿಸಲಾಗಿದೆ. ಈ ಅವಧಿಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳುವುದು, ಹೊಂದಿರುವುದು, ಬಳಸುವುದನ್ನು ನಿಷೇಧಿಸಲಾಗಿದೆ.
ಕೇಂದ್ರ-ರಾಜ್ಯ ಸರ್ಕಾರಿ ಇಲಾಖೆಗಳು, ಬ್ಯಾಂಕ್ ವಲಯ, ಭದ್ರತಾ ಏಜೆನ್ಸಿಗಳು, ಸರ್ಕಾರದ ವರ್ಗ-1 ರ ಅಧಿಕಾರಿಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ. ಆದಾಗ್ಯೂ ಕೆಲವು ನಿರ್ದಿಷ್ಟ ಪ್ರಕರಣಗಳಲ್ಲಿ ಶಸ್ತ್ರ ಠೇವಣಿಯಿಂದ ವಿನಾಯಿತಿ ಕೋರಬಹುದಾಗಿದ್ದು, ಏ. 10 ರ ಒಳಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.