ಒಳಮೀಸಲಾತಿ ವರ್ಗೀಕರಣದ ವಿರುದ್ಧ ಮೀಸಲು ಸಂರಕ್ಷಣಾ ಒಕ್ಕೂಟವು ಶಹಾಪುರ ನಗರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿದ್ದರಿಂದ ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ನೇಹಲ್ ಆರ್, ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆದೇಶ ಹೊರಡಿಸಿದ್ದಾರೆ.
ಶಹಾಪುರ ನಗರದ ಬಸವೇಶ್ವರ ವೃತ್ತದಿಂದ ಹೊಸ ತಹಶೀಲ್ದಾರ್ ಕಾರ್ಯಾಲಯದವರೆಗೆ ಕಾಲ್ನಡಿಗೆಯಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಪ್ರತಿಭಟನೆಗೆ ಶಹಾಪುರ, ವಡಗೇರಾ ಹಾಗೂ ಯಾದಗಿರಿ ಜಿಲ್ಲೆಯ ಕೆಲವು ತಾಂಡಾಗಳಿಂದ ಜನರು ಪ್ರತಿಭಟನೆಗೆ ಆಗಮಿಸುವ ಸಾಧ್ಯತೆ ಇದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಬೇಕು ಎಂದು ಪೊಲೀಸರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.
ಶಹಾಪುರ ನಗರದಲ್ಲಿ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಯಾವುದೇ ವ್ಯಕ್ತಿ, ಗುಂಪು ಕೂಡುವುದು, ಮೆರವಣಿಗೆ ಸಭೆ ಸಮಾರಂಭ ಹಾಗೂ ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಿದೆ.