ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಷಯವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಇಂದು ರಾಜ್ಯ ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ.
ಅಭ್ಯರ್ಥಿಗಳ ಆಯ್ಕೆ ಕುರಿತ ಈ ಪೂರ್ವಭಾವಿ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ , ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿವಹಿಸಲಿದ್ದಾರೆ.
ಶಾಸಕರ ಕ್ಷೇತ್ರದಲ್ಲಿನ ಸ್ಥಿತಿಗತಿ, ಸೋತ ಕ್ಷೇತ್ರಗಳಲ್ಲಿ ಸಂಘಟನಾತ್ಮಕ ಚಟುವಟಿಕೆ ಯಾವ ರೀತಿ ಇದೆ ಎನ್ನುವ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಟಿಕೆಟ್ ಆಕಾಂಕ್ಷಿಗಳು, ಸಮೀಕ್ಷಾ ವರದಿ, ಜಿಲ್ಲಾ ಸಮಿತಿಗಳ ಅಭಿಪ್ರಾಯದ ಕುರಿತು ನಡ್ಡಾ ಮಾಹಿತಿ ಪಡೆಯಲಿದ್ದಾರೆ.ಇನ್ನು, ನಾಳೆ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಈಗಾಗಲೇ ಬಹುತೇಕ ವಿಧಾನಸಭಾ ಕ್ಷೇತ್ರಗಳ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಬಿಜೆಪಿ ಇನ್ನೂ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಏಪ್ರಿಲ್ 9ರಂದು ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್ ಜೊತೆ ರಾಜ್ಯದ ನಾಯಕರು ಮಾತುಕತೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೆ ಕೆಲವು ಟಿಕೆಟ್ ಆಕಾಂಕ್ಷಿಗಳು ಅಸಮಾಧಾನದಿಂದ ಪಕ್ಷ ತೊರೆದ ಸನ್ನಿವೇಶಗಳೂ ನಡೆದಿವೆ. ಅಂತಹ ಯಾವುದೇ ಸಮಸ್ಯೆಗಳು ಬರಬಾರದು ಎನ್ನುವ ನಿಟ್ಟಿನಲ್ಲಿ ಬಿಜೆಪಿ ಅಳೆದು ತೂಗಿ ಪಟ್ಟಿ ಸಿದ್ಧಪಡಿಸುತ್ತಿದೆ. ಕ್ಷೇತ್ರ ಮಟ್ಟದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ನಂತರ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಪಡೆಯಲಾಗಿತ್ತು.