ರಾಮನಗರದ ಸಾತನೂರಿನಲ್ಲಿ ಗೋರಕ್ಷಣೆಯ ಹೆಸರಲ್ಲಿ ನಡೆದ ಕೊಲೆ ಧರ್ಮ ರಕ್ಷಣೆಯ ಹೆಸರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಆರಗ ಜ್ಞಾನೇಂದ್ರ ಅಸಮರ್ಥ ಗೃಹ ಸಚಿವ ಎಂದು ಹೇಳಿದ ಸಿದ್ದರಾಮಯ್ಯ, ಈ ಹತ್ಯೆಯ ಹೊಣೆಯನ್ನು ಹೊರಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ಇಂತಹ ಅಸಮರ್ಥ, ಅದಕ್ಷ ಮತ್ತು ಬೇಜವಾಬ್ದಾರಿ ಗೃಹಸಚಿವರನ್ನು ಎಂದೂ ನೋಡಿರಲಿಲ್ಲ. ತನ್ನ ಇಲಾಖೆಯ ಮೇಲೆ ನಿಯಂತ್ರಣ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಅವರು ಆಗ್ರಹಿಸಿದ್ದಾರೆ.
ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ ಭಾಗವಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕುಷ ತನಿಖೆ ನಡೆಸಬೇಕು. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.