ಆಂಧ್ರ ಪ್ರದೇಶ : ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬಿನಾಂಶ ಇರುವ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕೃತವಾಗಿ ತನಿಖೆ ಆರಂಭಿಸಿದೆ.
ಈ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನೊಂದಿಗೆ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು.
ಪ್ರಕರಣ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ತನಿಖೆ ನಡೆಸಲು ಸಿಬಿಐ ರಚಿಸಿದ್ದ ಐವರು ಸದಸ್ಯರ ಸ್ವತಂತ್ರವಾದ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಗೆ ಆದೇಶಿಸಿತ್ತು. ಈ ತಂಡದಲ್ಲಿ ಇಬ್ಬರು ಸಿಬಿಐ, ಇಬ್ಬರು ಆಂಧ್ರಪ್ರದೇಶ ಪೊಲೀಸ್ ಮತ್ತು ಒಬ್ಬರು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ತನಿಖಾಧಿಕಾರಿಗಳು ಇರಲಿದ್ದು, ಅಧಿಕೃತವಾಗಿ ತನಿಖೆ ಚುರುಕುಗೊಂಡಿದೆ.
ತಿರುಪತಿ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ವೈಎಸ್‌ಆರ್‌ಸಿಪಿ ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕಳೆದ ಅ.4ರಂದು ತನಿಖೆಗೆ ಆದೇಶವಿತಿತ್ತು. ಆದೇಶದ ಪ್ರಕಾರ, ಸಿಬಿಐ ನಿರ್ದೇಶಕರು ತನಿಖೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ.