ದಾವಣಗೆರೆ : ಜಿಲ್ಲೆಯ (Davangere) ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂದರ್ಭಕ್ಕೆ ಸಂಬಂಧಿಸಿದ್ದು ಎನ್ನಲಾದ ಜಮೀರ್ ಅಹ್ಮದ್ (Zameer Ahmed khan) ಮತ್ತು ಮೊಹಮ್ಮದ್ ಸಿರಾಜ್ ಅವರ ಆಡಿಯೋ (Audio) ಸಂಭಾಷಣೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಆಡಿಯೋದಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪರಾಜಿತ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ, ಇದೊಂದು ಸಂಪೂರ್ಣ ಸತ್ಯಕ್ಕೆ ದೂರವಾದ ಮತ್ತು ಆಧಾರರಹಿತವಾದ ವಿಷಯ ಎಂದು ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದ್ದಾರೆ.
ಶ್ರೀನಿವಾಸ ದಾಸಕರಿಯಪ್ಪ ಸಿರಾಜ್ ಅವರ ಕಾಲು ಹಿಡಿದಿದ್ದರು ಎಂಬ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಅವರು, ಅಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ಚುನಾವಣಾ ಸಮಯದಲ್ಲಿ ತಮಗೆ ಅವರ ಭೇಟಿಯೇ ಆಗಿಲ್ಲ ಎಂದಿದ್ದಾರೆ. ಅಲ್ಲದೆ ಸಚಿವ ಜಮೀರ್ ಅಹ್ಮದ್ ಅವರ ಪರಿಚಯವೇ ತಮಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ತಾವು ಎದುರಾಳಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದರೆ ತಾವೇ ಚುನಾವಣೆಯಲ್ಲಿ ವಿಜಯಶಾಲಿಯಾಗುತ್ತಿದ್ದೆವು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಸಾಮಾನ್ಯ ಹಿನ್ನೆಲೆಯಿಂದ ಬಂದು ಪ್ರಾಮಾಣಿಕವಾಗಿ ಸ್ಪರ್ಧಿಸಿದ್ದ ತಮಗೆ ಸಾರ್ವಜನಿಕರು ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದ್ದಾರೆ. ಆದರೆ ವಿರೋಧಿಗಳು ಹಣ ಮತ್ತು ಅಕ್ರಮ ಮಾರ್ಗಗಳ ಮೂಲಕ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು. ವಿವಾದಿತ ಆಡಿಯೋ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸೃಷ್ಟಿ ಎನ್ನಲಾಗುತ್ತಿದ್ದು, ಈ ಕುರಿತು ಸಮಗ್ರ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.