ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೆಸ್‌ನ ಎರಡು ಪಟ್ಟಿಯಲ್ಲಿ 166 ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗಿದೆ. ಜೆಡಿಎಸ್ ತನ್ನ 93 ಅಭ್ಯರ್ಥಿಗಳ ಒಂದು ಪಟ್ಟಿಯನ್ನು ಸಹ ಪ್ರಕಟಿಸಿದೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಅಥವಾ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ದೆಹಲಿಯಲ್ಲಿ ನಡೆದ ಬಿಜೆಪಿ ಟಿಕೆಟ್ ಚರ್ಚೆ ವಿಚಾರವಾಗಿ ಕಳೆದ 2 ದಿನ ನಡೆದ ಸಭೆ ಅಂತ್ಯಗೊಂಡಿದೆ. ಭಾನುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸದೀಯ ಮಂಡಳಿ ಸಭೆ ನಡೆದಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಂಬಂಧ ಸುದೀರ್ಘವಾಗಿ ಎರಡು ಗಂಟೆ ಕಾಲ ಚರ್ಚೆಗಳು ನಡೆದಿವೆ. ಹಲವು ದಿನಗಳಿಂದ ನಾಯಕರು ಸಭೆ ಮಾಡಿ, 200 ಅಭ್ಯರ್ಥಿಗಳ ಪಟ್ಟಿ ಸಿದ್ಧಮಾಡಿದ್ದಾರೆ. ಟಿಕೆಟ್ ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನ್ ಹೇಳುತ್ತೆ? ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು, ಯಾವುದೇ ಸಮಯದಲ್ಲಾದರೂ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.
ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆ ಆರಂಭವೂ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಇನ್ನು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.