ಗದಗ: ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲಿಸಲಾಗುತ್ತಿದ್ಪ್ದು, ಗದಗದಲ್ಲಿ ದಾಖಲೆ ಇಲ್ಲದ 50 ಲಕ್ಷ ರೂ. ಪತ್ತೆಯಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ಚುನಾವಣೆ ಸಿದ್ಧತೆ ಭರದಿಂದ ಸಾಗಿದೆ. ಇದರ ನಡುವೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯುವುದಕ್ಕಾಗಿ ನಗದು, ಆಭರಣ ಸೇರಿದಂತೆ ವಿವಿಧ ಉಡುಗೊರೆಗಳನ್ನು ನೀಡುತ್ತಿರುವ ಪ್ರಕರಣಗಳೂ ಬಯಲಾಗುತ್ತಿವೆ. ಅದರಂತೆ ಗದಗ ಜಿಲ್ಲೆಯ ದುಂಡೂರು ಚೆಕ್‌ಪೋಸ್ಟ್‌ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಲೆಕ್ಕಕ್ಕೆ ಸಿಗದ 50 ಲಕ್ಷ ನಗದನ್ನು ಪತ್ತೆಯಾಗಿದ್ದು, ಪೊಲೀಸರು ನಗದು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಲ್ಲಿಯವರೆಗೆ ಬರೋಬ್ಬರಿ 69.3 ಕೋಟಿ ಮೌಲ್ಯದ ಸ್ವತ್ತು, ನಗದನ್ನು ಚುನಾವಣಾ ಕರ್ತವ್ಯನಿರತ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಜ್ಯ ವಿವಿಧ ಕಡೆಗಳಲ್ಲಿ, ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದ್ದು, ದಾಖಲೆ ಇಲ್ಲದೆ ಸಾಗಿಸುವ ನಗದು, ಆಭರಣ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗುತ್ತಿದೆ.